ಚೈತನ್ಯ ನ್ಯೂಸ್ ೨೪ ನರೇಗಲ್ಲ ಜೂ.2:
2026-27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಸಮೀಪದ ಜಕ್ಕಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಸಂಕೀರ್ಣದಲ್ಲಿ ಸೋಮವಾರ ಸಂಭ್ರಮ, ಸಡಗರ ಹಾಗೂ ಉತ್ಸಾಹದಿಂದ ನೆರವೇರಿತು.
ಹೊಸ ಶೈಕ್ಷಣಿಕ ವರ್ಷದ ಮೊದಲ ದಿನದ ಅಂಗವಾಗಿ ಶಾಲೆಯನ್ನು ತಳಿರು ತೋರಣಗಳು, ಬಣ್ಣಬಣ್ಣದ ಅಲಂಕಾರಗಳು ಹಾಗೂ ಸ್ವಾಗತ ಫಲಕಗಳಿಂದ ಅಲಂಕರಿಸಲಾಗಿತ್ತು. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಗುಲಾಬಿ ಹೂವು ನೀಡಿ, ಸಿಹಿ ಹಂಚುವ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು. ಬೇಸಿಗೆ ರಜೆಯ ಬಳಿಕ ಶಾಲೆಗೆ ಮರಳಿದ ವಿದ್ಯಾರ್ಥಿಗಳಲ್ಲಿ ವಿಶೇಷ ಉತ್ಸಾಹ ಕಂಡುಬಂದಿತು.
ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನೆಯ ನಂತರ ಮಾತನಾಡಿದ ಕೆ.ಜಿ.ಎಸ್. ಜಕ್ಕಲಿಯ ಮುಖ್ಯ ಶಿಕ್ಷಕ ಎಸ್.ಬಿ. ಗವಿಯವರು, “ಮಕ್ಕಳು ದೇಶದ ಭವಿಷ್ಯದ ಆಸ್ತಿಯಾಗಿದ್ದು, ಇಂದಿನ ವಿದ್ಯಾರ್ಥಿಗಳೇ ನಾಳಿನ ಪ್ರಜೆಗಳು. ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವುದು ಮೂಲಭೂತ ಹಕ್ಕು. ಶಿಕ್ಷಣ ಇಲಾಖೆಯು ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಹಲವು ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಎಲ್ಲರೂ ಕಾಳಜಿ ವಹಿಸಬೇಕು” ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಲಭ್ಯವಿರುವ ಗುಣಮಟ್ಟದ ಶಿಕ್ಷಣ, ಉಚಿತ ಪಠ್ಯಪುಸ್ತಕಗಳು, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ವಿದ್ಯಾರ್ಥಿವೇತನ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಗ್ರಾಮದ ಪ್ರತಿಯೊಬ್ಬ ಮಗುವೂ ಶಾಲೆಗೆ ದಾಖಲಾಗುವಂತೆ ಪೋಷಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಬಳಿಕ ನಡೆದ ಪೋಷಕರ ಹಾಗೂ ಶಿಕ್ಷಕರ ಮಹಾಸಭೆಯಲ್ಲಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ಇಲಾಖೆಯ ಹೊಸ ಉಪಕ್ರಮಗಳು, ಎಲ್.ಬಿ.ಎ. ಕಾರ್ಯಕ್ರಮ, ದ್ವಿಭಾಷಾ ಶಿಕ್ಷಣ ವ್ಯವಸ್ಥೆ ಹಾಗೂ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸುವ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು. ಮಕ್ಕಳ ನಿಯಮಿತ ಹಾಜರಾತಿ, ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿಗೆ ಪೋಷಕರ ಸಹಕಾರದ ಅಗತ್ಯವನ್ನು ಶಿಕ್ಷಕರು ವಿವರಿಸಿದರು.
ಸಭೆಯಲ್ಲಿ ಮಾತನಾಡಿದ ಶಿಕ್ಷಕರು, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸಮಾನವಾಗಿ ಉತ್ತಮ ಶಿಕ್ಷಣ ಹಾಗೂ ಮೂಲಸೌಕರ್ಯಗಳನ್ನು ಒದಗಿಸುತ್ತಿದ್ದು, ಗ್ರಾಮದ ಎಲ್ಲ ಮಕ್ಕಳು ಸರ್ಕಾರಿ ಶಾಲೆಯಲ್ಲಿಯೇ ಶಿಕ್ಷಣ ಪಡೆಯುವಂತೆ ಪಾಲಕರು ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಪದಾಧಿಕಾರಿಗಳು ಶಾಲೆಯ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು. ಮುಖ್ಯ ಶಿಕ್ಷಕ ಹೆಚ್.ಎಸ್. ಬಿಂಗಿ ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಎಸ್.ಎ. ಪಲ್ಲೇದ ವಂದಿಸಿದರು. ಎಂ.ವಿ. ತಾಳಿಕೋಟಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಾಲಾ ಪ್ರಾರಂಭೋತ್ಸವವನ್ನು ಯಶಸ್ವಿಗೊಳಿಸಿದರು.